ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ!

ಬೆಂಗಳೂರು : ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿದ್ಯಾರ್ಥಿನಿಯೊಬ್ಬಳು ಕ್ವಾರಂಟೈನ್ ಮೊಹರು ಅಳಿಸಿ ಪರೀಕ್ಷೆಗೆ ಹಾಜರಾಗಿದ್ದಾಳೆಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇದು ಸತ್ಯಕ್ಕೆ ದೂರವಾದ ಮಾತು. ಈಗಾಗಲೇ ವಿದ್ಯಾರ್ಥಿನಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ರಿಪೋರ್ಟ್ ನೆಗೆಟಿವ್ ಎಂದು ಬಂದಿದೆ. ಹಾಗಾಗಿ ಆಕೆ ಪರೀಕ್ಷೆ ಬರೆದ ಕೊಠಡಿಯಲ್ಲಿ ಹಾಜರಿದ್ದ ಯಾವುದೇ ಪರೀಕ್ಷಾರ್ಥಿಗಳು ಭಯಪಡಬೇಕಾದ ಅಗತ್ಯವಿಲ್ಲ. ಯಾವುದೇ ವಿದ್ಯಾರ್ಥಿ ಕ್ವಾರಂಟೈನ್ಗೆ ಒಳಗಾಗಬೇಕಾದ ಅಗತ್ಯವೂ ಇಲ್ಲ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿನಿ ಕೂಡ ಆರೋಗ್ಯವಾಗಿದ್ದು, ಸದ್ಯ ಅವರ ತಂದೆ ಕ್ವಾರಂಟೈನ್ ನಲ್ಲಿ ಇದ್ದಾರೆ. ಅವರಿಗೂ ಯಾವುದೇ ಆರೋಗ್ಯದ ತೊಂದರೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಪರೀಕ್ಷೆ ಬರೆದ 6 ಲಕ್ಷ ವಿದ್ಯಾರ್ಥಿಗಳ ಹಿತವನ್ನು ಕಾಯ್ದ ಶಿಕ್ಷಣ ಇಲಾಖೆಗೆ ಈ ವಿದ್ಯಾರ್ಥಿನಿಯೋರ್ವಳನ್ನು ಪರೀಕ್ಷಿಸದೆ ಬೇರೊಬ್ಬರಿಗೆ ತೊಂದರೆಯನ್ನುಂಟು ಮಾಡುವಂತಹ ಯಾವುದೇ ಉದ್ದೇಶವಿಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯೂ ನಮ್ಮ ಶಿಕ್ಷಣ ಇಲಾಖೆಯ ಆಸ್ತಿಯಾಗಿದ್ದು, ಅವರ ಹಿತವೇ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಕೋರ್ಟ್ ನ ಆದೇಶದಂತೆ ನಡೆಯಲಿವೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ 200 ಮಕ್ಕಳಿಗೆ ಒಂದರಂತೆ ಆರೋಗ್ಯ ತಪಾಸಣಾ ಕೇಂದ್ರಗಳನ್ನು ಪರೀಕ್ಷಾ ಕೇಂದ್ರದ ಮುಖ್ಯ ದ್ವಾರದಲ್ಲಿ ಸ್ಥಾಪಿಸಲಾಗುತ್ತದೆ. ಪ್ರತಿ ವಿದ್ಯಾರ್ಥಿ ತಲಾ 2 ಮಾಸ್ಕ್ ಗಳನ್ನು ಪಡೆಯಲಿದ್ದಾರೆ. ಪ್ರತಿ ತಾಲೂಕಿನ ಕೇಂದ್ರ ಸ್ಥಾನ ಮತ್ತು ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಕನಿಷ್ಠ 2 ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಕಾಯ್ದಿರಿಸಿದ ಪರೀಕ್ಷಾ ಕೇಂದ್ರಗಳಾಗಿ ಜಾರಿಯಲ್ಲಿಡಲಾಗುತ್ತದೆ ಎಂದು ಹೇಳಿದ್ದಾರೆ.

Exit mobile version