ಚೆನ್ನೈ : ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣಂ ಅವರ ಅಂತ್ಯ ಸಂಸ್ಕಾರ ಇಂದು ಚೆನ್ನೈನ ರೆಡ್ ಹಿಲ್ ಫಾರ್ಮ್ ಹೌಸ್ ನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಫಾರ್ಮ್ ಹೌಸ್ ನಲ್ಲಿ ಎಸ್ ಪಿಬಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಇಂದು ಬೆಳಿಗ್ಗೆ 7 ರಿಂದ 11ರ ವರೆಗೂ ಪಾರ್ಥಿವ ಶರೀರ ವೀಕ್ಷಿಸಬಹುದು.
ತಮ್ಮ ನೆಚ್ಚಿನ ಸಂಗೀತಗಾರನ ಅಂತಿಮ ದರ್ಶನ ಪಡೆಯುವುದಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಆದರೆ, ಅಂತ್ಯ ಸಂಸ್ಕಾರ ನಡೆಯುವ ಸ್ಥಳಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಅಲ್ಲಿ ಕುಟುಂಬಸ್ಥರು, ಸಂಬಂಧಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಗಾನ ಗಾರುಡಿಗನ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ಶೋಕಾಚರಣೆ ಆಚರಿಸಲಾಯಿತು. ಸರ್ಕಾರಿ ಕಟ್ಟಡಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗಿತ್ತು. ಕೊರೊನಾ ಮಹಾಮಾರಿಗೆ ಬಲಿಯಾಗಿರುವ ಎಸ್ ಪಿಬಿ, ಕಳೆದ 51 ದಿನಗಳಿಂದ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ.