ಪ್ರವಾಸಿಗರಿಂದ ಸೋಂಕು ಹರಡದಂತೆ ಮಾರ್ಗಸೂಚಿ: ಕೆ.ಸುಧಾಕರ್

dr Sudhakar health education

Dr.Sudhakar meeting

ಮಡಿಕೇರಿ: ಕೊಡಗು ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಂದ ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸಲು ನೂತನ ಮಾರ್ಗಸೂಚಿ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಮಡಿಕೇರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ದಸರಾ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವಾಸಿಗರು ಬರುತ್ತಾರೆ. ಎಲ್ಲ ಪ್ರವಾಸಿಗರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಬೇಕು. ಪ್ರವಾಸಿ ತಾಣಗಳಲ್ಲಿ ಪೊಲೀಸ್, ಕಂದಾಯ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸಿ ಆರೋಗ್ಯ ತಪಾಸಣೆ ಸಹಿತ ಇತರೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಮಾರ್ಗಸೂಚಿ ಸಿದ್ಧಪಡಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.

ಜಿಲ್ಲೆಯ ಆರೋಗ್ಯ ಸೇವೆಯಲ್ಲಿ ಕೆಲ ನ್ಯೂನ್ಯತೆಗಳಿವೆ. ಬೆಂಗಳೂರಿಗೆ ಹಿಂತಿರುಗಿದ ತಕ್ಷಣ ಹಿರಿಯ ಅಧಿಕಾರಿಗಳ ಜತೆ ಮಾತನಾಡಿ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ವೈದ್ಯರ ಕೊರತೆ ನೀಗಿಸಲು ಕೂಡ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮೊದಲು ಕೊಡಗು ಜಿಲ್ಲೆ ಹಸಿರು ವಲಯದಲ್ಲಿತ್ತು. ಅನ್ ಲಾಕ್ ಬಳಿಕ ಸೋಂಕಿನ ಪ್ರಮಾಣ ಮತ್ತು ಸಾವಿನ ಪ್ರಮಾಣ ಹೆಚ್ಚಿದೆ. ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕೆಲ ನಿರ್ಧಾರಗಳನ್ನು ಕೈಗೊಳ್ಳಬೇಕಿದೆ. ಮುಂದಿನ ವಾರ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಬಂದು ಮತ್ತೊಮ್ಮೆ ಪರಿಶೀಲನೆ ನಡೆಸಲಾಗುವುದು. ಕಟ್ಟುನಿಟ್ಟಾಗಿ ಮಾರ್ಗಸೂಚಿ ಜಾರಿಗೊಳಿಸಲು ಸ್ಥಳಿಯ ಶಾಸಕರು ಸಲಹೆ ನೀಡಿದ್ದಾರೆ. ಇದು ಸ್ವಾಗತಾರ್ಹ ಎಂದರು

Exit mobile version