ರಾಜ್ಯಾದ್ಯಂತ ಎರಡುದಿನ ಭಾರಿ ಮಳೆ : ಗದಗ ಸೆರಿ ಇನ್ನು ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..!

ಉತ್ತರಪ್ರಭ ಸುದ್ದಿ

ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹವಾಮಾನ ವೈಪರಿತ್ಯ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಬೆಂಗಳೂರು ನಗರದಲ್ಲಿ ಜಿಟಿಜಿಟಿ ಮಳೆಯಾಗಲಿದ್ದು, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು – ಸಿಡಿಲು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ 25 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಇಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಕೊಂಚ ಮಳೆಯ ಪ್ರಮಾಣ ಕೊಂಚ ಇಳಿಮುಖವಾಗುವ ಸಾಧ್ಯತೆಗಳಿವೆ. ಇತ್ತ ರಾಜ್ಯದ ಬಹುತೇಕ ನದಿಗಳು, ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದು, ನೀರು ಹರಿಯುತ್ತಿದೆ. ಇತ್ತ ನಿರಂತರ ಮಳೆ ಹಿನ್ನೆಲೆ ಕೃಷಿ ಭೂಮಿಯಲ್ಲಿ ನೀರು ಶೇಖರಣೆಯಾಗುತ್ತಿರುವ ಕಾರಣ ರೈತರು ಸಂಕಷ್ಟದಲ್ಲಿ ಸಿಲುಕಿದ್ದು, ಬೆಳೆದ ಬೆಳೆಗಳು ನೀರು ಪಾಲಾಗಿವೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Exit mobile version