ಶಾಲೆ ಹಾಗೂ ವಸತಿ ಶಾಲೆಗಳ ಮಕ್ಕಳ ಆರೋಗ್ಯದ ಕುರಿತು ಹೆಚ್ಚಿನ ನಿಗಾ ವಹಿಸಿ -ಜಿಲ್ಲಾಧಿಕಾರಿ

ಉತ್ತರಪ್ರಭ ಸುದ್ದಿ
ಗದಗ:
ಜಿಲ್ಲೆಯಲ್ಲಿ ಶಾಲೆ ಹಾಗೂ ವಸತಿ ಶಾಲೆಗಳಲ್ಲಿರುವ ಮಕ್ಕಳ ಆರೋಗ್ಯದ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುoದರೇಶ್‌ಬಾಬು ತಿಳಿಸಿದರು. ಜಿಲ್ಲಾ ಪಂಚಾಯತ್ ವಿಡಿಯೋ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜ ಕಲ್ಯಾಣ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಹಾಗೂ ಶಿಕ್ಷಣ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಕ್ರಮವಾಗಿ ಭೇಟಿ ನೀಡುವ ಮೂಲಕ ಸೋಂಕು ನಿಯಂತ್ರಣಕ್ಕೆ ವಹಿಸುವ ಕ್ರಮಗಳ ಕುರಿತು ಪರಿಶೀಲನೆ ನಡೆಸಬೇಕು ಹಾಗೂ ಅಗತ್ಯ ಸಲಹೆ ಸೂಚನೆಗಳನ್ನು ಶಾಲಾ ಮುಖ್ಯಸ್ಥರಿಗೆ ನೀಡಬೇಕು. ಸೋಂಕು ಕಂಡು ಬಂದ ಶಾಲೆಗಳಲ್ಲಿ ಸರ್ಕಾರದ ನಿಯಮಾನುಸಾರ ಕ್ರಮ ಜರುಗಿಸಿ ಮೇಲಾಧಿಕಾರಿಗಳಿಗೆ ವರದಿ ನೀಡಬೇಕು ಎಂದು ತಿಳಿಸಿದರು.

ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾದಲ್ಲಿ ಅಂತಹ ಶಾಲೆಗಳನ್ನು ಬಂದ್ ಮಾಡಲು ಕ್ರಮ ಕೈಗೊಳ್ಳಬೇಕು. ವಸತಿ ಶಾಲೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟ ಮಕ್ಕಳಿಗೆ ಕಡ್ಡಾಯವಾಗಿ ಪ್ರತ್ಯೇಕವಾಗಿ ಚಿಕಿತ್ಸೆ ಒದಗಿಸಬೇಕು. ಸಾಧ್ಯವಾದಷ್ಟು ಶಾಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅನಗತ್ಯ ಪ್ರಯಾಣವನ್ನು ನಿರ್ಬಂಧಿಸಬೇಕು. ಮಕ್ಕಳಲ್ಲಿ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಿ ಸೋಂಕು ಲಕ್ಷಣಗಳು ಕಂಡು ಬಂದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತಕ್ಷಣ ವರದಿ ಮಾಡಬೇಕು. ಈ ಬಗ್ಗೆ ಇಲಾಖಾ ಮುಖ್ಯಸ್ಥರುಗಳು ಕ್ರಮ ವಹಿಸುವಂತೆ ಸೂಚಿಸಿದರು.

ತಾಲೂಕಾ ಆಡಳಿತಗಳು ಕೋವಿಡ್ ಸೋಂಕು ನಿಯಂತ್ರಣ ಹಾಗೂ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಸೋಂಕು ದೃಢಪಟ್ಟ ವ್ಯಕ್ತಿಯು ಹೋಮ್ ಐಸೋಲೇಶನ್‌ನಲ್ಲಿರುವವರೆಗೆ ಆರೋಗ್ಯ ಇಲಾಖೆಯಿಂದ ನೀಡುವ ಔಷಧಿ ಕಿಟ್ ಗಳು ಸಕಾಲದಲ್ಲಿ ತಲುಪುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಒಟ್ಟಾರೆ ಸೋಂಕು ನಿಯಂತ್ರಣಕ್ಕೆ ಹಾಗೂ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಲಭ್ಯವಾಗುವಂತೆ ಕ್ರಮ ಜರುಗಿಸಲು ತಿಳಿಸಿದರು.

ಇನ್ನುಳಿದಂತೆ ಸಭೆಯಲ್ಲಿ ಬೆಳೆ ಸಮೀಕ್ಷೆ, ವಿಮಾ ಪರಿಹಾರ ಪಾವತಿ, ರುದ್ರಭೂಮಿಗೆ ಜಾಗ ಗುರುತಿಸುವಿಕೆ ಸೇರಿದಂತೆ ಕಂದಾಯ ವಿಷಯಗಳ ಬಗ್ಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ಅಪರ ಜಿಲ್ಲಾಧಿಕಾರಿ ಎಂ.ಸತೀಶಕುಮಾರ್ ಅವರು ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ, ಜಂಟಿ ಕೃಷಿ ನಿರ್ದೇಶಕ ವೀರೇಶ ಹುನಗುಂದ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಬಿರಾದಾರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಡಿಡಿಎಲ್ ಆರ್ ರವಿಕುಮಾರ್, ಹಿಂದುಳಿದವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ತಾಲೂಕಿನ ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಜರಿದ್ದರು.

Exit mobile version